ಆರತಿಬೈಲ್ ತಿರುವಿನ ಅಪಘಾತ ಸ್ಥಳ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಯಲ್ಲಾಪುರ: ಯಲ್ಲಾಪುರ–ಅಂಕೋಲಾ ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ತಿರುವಿನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಸುಷ್ಮಾ ಗೊಡಬೋಲೆ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜುಲೈ 9ರಂದು ನಡೆದ ಈ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಅಪಘಾತಕ್ಕೆ ಕಾರಣವಾದ ಪರಿಸ್ಥಿತಿಗಳು, ರಸ್ತೆ ಸುರಕ್ಷತಾ ವ್ಯವಸ್ಥೆ ಹಾಗೂ ಅಪಾಯದ ಅಂಶಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಅರಬೈಲ್ ಘಟ್ಟ ವ್ಯಾಪ್ತಿಯ ಭೂಕುಸಿತ ಸಂಭವನೀಯ ಪ್ರದೇಶಗಳು ಹಾಗೂ ಅಪಾಯಕಾರಿ ತಿರುವುಗಳಿಗೂ ಭೇಟಿ ನೀಡಿ ಪರಿಶೀಲಿಸಿದರು. ಮಳೆಗಾಲದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದಕ್ಕೂ ಮುನ್ನ ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ ಮತ್ತು ಸಾರ್ವಜನಿಕ ಸೇವೆಗಳ ಕುರಿತು ಪರಿಶೀಲಿಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಯಲ್ಲಾಪುರ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಯಲ್ಲಾಪುರ ಪೊಲೀಸ್ ನಿರೀಕ್ಷಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
