ಶಿರಸಿ-ಸಿದ್ದಾಪುರ ಕ್ಷೇತ್ರದ ಸಮಸ್ಯೆಗಳ ಕುರಿತು ಸಚಿವ ಲಕ್ಷ್ಮಣ ಸವದಿ ಅವರ ಗಮನ ಸೆಳೆದ ಶಾಸಕ ಭೀಮಣ್ಣ ನಾಯ್ಕ

0
WhatsApp Image 2026-08-06 at 16.47.43(3)

ಕಾರವಾರ: ಕಾರವಾರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಾನ್ಯ ಸಂಪುಟ ದರ್ಜೆಯ ಸಚಿವ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲೆಯ ಅತಿವೃಷ್ಟಿ ಮತ್ತು ಅನಾವೃಷ್ಟಿ ಕುರಿತ ಮಹತ್ವದ ಸಭೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಶ್ರೀ ಭೀಮಣ್ಣ ನಾಯ್ಕ ಅವರು ಸಕ್ರಿಯವಾಗಿ ಪಾಲ್ಗೊಂಡು, ತಮ್ಮ ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತು ಧ್ವನಿ ಎತ್ತಿದರು.

ಸಭೆಯಲ್ಲಿ ಕ್ಷೇತ್ರ ಹಾಗೂ ಜಿಲ್ಲೆಯ ರೈತರು, ಸಾರ್ವಜನಿಕರು ಎದುರಿಸುತ್ತಿರುವ ವಿಷಯಗಳನ್ನು ಮಾನ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದ ಶಾಸಕರು, ಪರಿಹಾರ ಕೈಗೊಳ್ಳುವಂತೆ ಮನವಿ ಮಾಡಿದರು.

ನಿರಂತರ ಮಳೆಯಿಂದಾಗಿ ಹಾನಿಗೊಳಗಾದ ಮತ್ತು ಕುಸಿದುಬಿದ್ದ ಮನೆಗಳಿಗೆ ನೀಡಲಾಗುತ್ತಿರುವ ಪರಿಹಾರ ಧನ ತೀರಾ ಕಡಿಮೆಯಾಗಿದೆ. ಆದ್ದರಿಂದ NDRF ಮತ್ತು SDRF ಮಾರ್ಗಸೂಚಿಗಳಿಗೆ ತಿದ್ದುಪಡಿ ತಂದು, ಸಂತ್ರಸ್ತರಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ಜಲ ಜೀವನ್ ಮಿಷನ್ (JJM) ಯೋಜನೆ ಅಡಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಕಂಡುಬಂದಿರುವ ತಾಂತ್ರಿಕ ಹಾಗೂ ಪ್ರಾಯೋಗಿಕ ತೊಡಕುಗಳನ್ನು ಶೀಘ್ರವೇ ಪರಿಹರಿಸಿ, ಗ್ರಾಮಸ್ಥರಿಗೆ ಸುಲಭವಾಗಿ ಕುಡಿಯುವ ನೀರು ಸಿಗುವಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಮಲೆನಾಡು ಭಾಗದ ಪ್ರಮುಖ ಬೆಳೆಯಾದ ಅಡಿಕೆಗೆ ಮಾರಕವಾಗಿ ಪರಿಣಮಿಸಿರುವ ‘ಎಲೆ ಚುಕ್ಕಿ’ ಹಾಗೂ ‘ಹಳದಿ ರೋಗ’ದಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ರೋಗಗಳ ನಿಯಂತ್ರಣ ಹಾಗೂ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ತ್ವರಿತ ಗತಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *